ಬೆಂಗಳೂರು : ಕರ್ನಾಟಕದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗು ನಿಯಂತ್ರಿಸುವ ಉದ್ದೇಶದಿಂದ ಗಡಿ ಜಿಲ್ಲೆಗಳಲ್ಲಿ ವಾರಾಂತ್ಯದ ರಾತ್ರಿ ನಿಷೇಧಾಜ್ಞೆ ಜಾರಿಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಶನಿವಾರ ಮತ್ತು ಭಾನುವಾರ ರಾಜ್ಯದ ಎಂಟು ಗಡಿ ಜಿಲ್ಲೆಗಳಲ್ಲಿ ವಾರಾಂತ್ಯದ ಕರ್ಫ್ಯೂ ಜಾರಿಗೊಳಿಸಲಾಗುವುದು ಎಂದರು. ಇಂದಿನಿಂದಲೇ ಕೇರಳ, ಮಹಾರಾಷ್ಟ್ರ ಗಡಿ ಜಿಲ್ಲೆಗಳಲ್ಲಿ ರಾತ್ರಿ ನಿಷೇಧಾಜ್ಞೆ ಜಾರಿಗೊಳಿಸಲಾಗುವುದು ಎಂದು ತಿಳಿಸಿದರು.
ಮೈಸೂರು, ಚಾಮರಾಜನಗರ, ಕೊಡಗು, ದಕ್ಷಿಣ ಕನ್ನಡ, ವಿಜಯಪುರ, ಕಲಬುರಗಿ, ಬೀದರ್, ಬೆಳಗಾವಿ ಸೇರಿದಂತೆ ಒಟ್ಟು 8 ಜಿಲ್ಲೆಗಳಲ್ಲಿ ಕರ್ಫ್ಯೂ ಜಾರಿಗೊಳಿಸಲಾಗಿದೆ. ಬೆಂಗಳೂರು ಸೇರಿದಂತೆ ಎಲ್ಲಾ ಜಿಲ್ಲೆಗಳಲ್ಲೂ ನೈಟ್ ಕರ್ಫ್ಯೂ ಜಾರಿಗೊಳಿಸಲಾಗಿದೆ. ರಾತ್ರಿ 9 ಗಂಟೆಯಿಂದ ಬೆಳಗ್ಗೆ 5 ಗಂಟೆವರೆಗೂ ರಾತ್ರಿ ನಿಷೇಧಾಜ್ಞೆ ಜಾರಿಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ರಾಜ್ಯದಲ್ಲಿ ಕೋವಿಡ್ ನಿರ್ವಹಣೆ ಹಾಗೂ ಶಾಲಾ-ಕಾಲೇಜುಗಳನ್ನು ಪುನರಾರಂಭಿಸುವ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ಇಂದು ಸರ್ಕಾರದ ಹಿರಿಯ ಅಧಿಕಾರಿಗಳು ಹಾಗೂ ತಜ್ಞರೊಂದಿಗೆ ನಡೆದ ಸಭೆಯ ಮುಖ್ಯಾಂಶಗಳು ಹೀಗಿವೆ: 1. ಗಡಿ ಜಿಲ್ಲೆಗಳಲ್ಲಿ ರಾತ್ರಿ ಕರ್ಫ್ಯೂ, ವಾರಾಂತ್ಯದ ಕರ್ಫ್ಯೂ ಜಾರಿ ಮಾಡಲು ತೀರ್ಮಾನ 2. ಇತರ ಜಿಲ್ಲೆಗಳಲ್ಲಿ ಪರಿಸ್ಥಿತಿಯನ್ನು ಅವಲೋಕಿಸಿ ಕ್ರಮ ಕೈಗೊಳ್ಳಲು ತೀರ್ಮಾನ. 3. ಶಾಲೆಗಳನ್ನು ಎರಡು ಹಂತದಲ್ಲಿ ಪ್ರಾರಂಭಿಸಲಾಗುತ್ತಿದ್ದು, ಮೊದಲನೇ ಹಂತದಲ್ಲಿ ನಿಬಂಧನೆಗಳಿಗೊಳಪಟ್ಟಂತೆ, ಆಗಸ್ಟ್ 23 ರಿಂದ 9, 10 ಮತ್ತು ಪಿಯುಸಿ ತರಗತಿಯನ್ನು ಪ್ರಾರಂಭಿಸಲು ತೀರ್ಮಾನ; ಮಾರ್ಗಸೂಚಿಗಳ ಕುರಿತು ಅಧಿಕೃತ ಅಧಿಸೂಚನೆ ಹೊರಡಿಸಲಾಗುವುದು. 4. ಕೋವಿಡ್ ತೀವ್ರತೆ ನೋಡಿಕೊಂಡು ಆಗಸ್ಟ್ ತಿಂಗಳಾಂತ್ಯಕ್ಕೆ ಪ್ರಾಥಮಿಕ ಮತ್ತು ಪ್ರೌಢಶಾಲಾ ತರಗತಿ ಶಾಲೆ ಆರಂಭಿಸಲು ತೀರ್ಮಾನ ತೆಗೆದುಕೊಳ್ಳಲಾಗುವುದು 5. ರಾಜ್ಯದಲ್ಲಿ ರಾತ್ರಿ ಕರ್ಫ್ಯೂ (ರಾತ್ರಿ 9 ಗಂಟೆಯಿಂದ ಬೆಳಗ್ಗೆ 5 ಗಂಟೆವರೆಗೆ) ಕಟ್ಟು ನಿಟ್ಟಾಗಿ ಜಾರಿಗೊಳಿಸಲು ಸೂಚಿಸಲಾಗಿದೆ.