ತುಮಕೂರು: ರಾಷ್ಟ್ರೀಯ ಹೆದ್ದಾರಿಯಷ್ಟೇ ಕೆಶಿಪ್ ರಸ್ತೆಗೂ ಪ್ರಾಮುಖ್ಯತೆ ನೀಡಿ ಶೀಘ್ರ ಕಾಮಗಾರಿ ಪೂರ್ಣಗೊಳಿಸಿ ಸಂಚಾರಕ್ಕೆ ಮುಕ್ತಗೊಳಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಕೆ.ಚೆನ್ನಬಸಪ್ಪ ಸೂಚಿಸಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿಂದು ಕೆಶಿಪ್ ರಸ್ತೆಯ ವಿವಿಧ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಪರಿಶೀಲನೆ ನಡೆಸಿ ಮಾತನಾಡಿದ ಅವರು, ಜಿಲ್ಲೆಯ ಮಾಗಡಿ-ಸೋಮವಾರಪೇಟೆ ಕೆಶಿಪ್ ರಸ್ತೆಗೆ ಭೂಸ್ವಾಧೀನಪಡಿಸಿಕೊಳ್ಳುವ ಜಮೀನಿಗೆ ಸೂಕ್ತ ಪರಿಹಾರ ಕಲ್ಪಿಸಿ ರಸ್ತೆಯ ಅಭಿವೃದ್ಧಿ ಕಾಮಗಾರಿಯನ್ನು ನಿಗಧಿತ ಕಾಲಮಿತಿಯೊಳಗೆ ಪೂರ್ಣಗೊಳಿಸಬೇಕೆಂದು ನಿರ್ದೇಶಿಸಿದರು.
ಭೂಸ್ವಾಧೀನಪಡಿಸಿಕೊಂಡ ಜಮೀನಿಗೆ ಪರಿಹಾರ ಕಲ್ಪಿಸುವಲ್ಲಿ ವಿಳಂಬ ಮಾಡದೆ, ಯಾವುದೇ ಗೊಂದಲವಿಲ್ಲದೆ ಸೂಕ್ತ ಪರಿಹಾರ ಒದಗಿಸಿ ಅಭಿವೃದ್ಧಿ ಕೆಲಸವನ್ನು ಸರಾಗವಾಗಿ ನಡೆಸಬೇಕು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದರು.
ಸಂಬಂಧಿಸಿದ ಎಲ್ಲಾ ಅಧಿಕಾರಿಗಳು ಸಮನ್ವಯ ಸಾಧಿಸಿಕೊಂಡು ಕೆಶಿಪ್ ರಸ್ತೆಯನ್ನು ಅಭಿವೃದ್ಧಿಗೊಳಿಸಬೇಕು ಎಂದು ನಿರ್ದೇಶಿಸಿದರು.
ಕೆಶಿಪ್ ರಸ್ತೆಯ ವಿಶೇಷ ಜಿಲ್ಲಾಧಿಕಾರಿ ಲೋಕನಾಥ್ ಮಾತನಾಡಿ, ಯಾವುದೇ ಗೊಂದಲಕ್ಕೆ ಆಸ್ಪದ ಕೊಡದೆ ಭೂಸ್ವಾಧೀನ ಪ್ರಕ್ರಿಯೆ ಹಾಗೂ ಪರಿಹಾರ ಕಲ್ಪಿಸುವ ಪ್ರಕ್ರಿಯನ್ನು ಪೂರ್ಣಗೊಳಿಸಿ ರಸ್ತೆಯನ್ನು ಅಭಿವೃದ್ಧಿಗೊಳಿಸಬೇಕು ಎಂದು ತಿಳಿಸಿದರು.
ಉಪವಿಭಾಗಾಧಿಕಾರಿ ಅಜಯ್ ಮಾತನಾಡಿ, ಕೆಶಿಪ್ ರಸ್ತೆಯ ಅಭಿವೃದ್ಧಿ ಕುರಿತು ಪರಿಶೀಲನೆ ನಡೆಸಿ ಕೆಲವೊಂದು ಮಾರ್ಗದರ್ಶನ ನೀಡಿದರು.
ಸಭೆಯಲ್ಲಿ ಕೆಶಿಪ್ ರಸ್ತೆಯ ತಹಸೀಲ್ದಾರ್ ರಾಮಕೃಷ್ಣ ಮೂರ್ತಿ ಸೇರಿದಂತೆ ಇತರರಿದ್ದರು.