ತುಮಕೂರು : ಗರ್ಭಪೂರ್ವ ಮತ್ತು ಪ್ರಸವ ಪೂರ್ವ ಭ್ರೂಣಲಿಂಗ ಪತ್ತೆ ಮಾಡುವುದು ಕಾನೂನು ಅಪರಾಧವಾಗಿದ್ದು, ಸರ್ಕಾರಿ ಅಸ್ಪತ್ರೆಗಳಲ್ಲಿ ಪಿಸಿಪಿಎನ್ ಡಿಟಿ ಕಾಯ್ದೆಗೆ ಸಂಬಂಧಿಸಿದಂತೆ ಯಾವುದೇ ನ್ಯೂನ್ಯತೆಗಳು ಕಂಡು ಬರದಂತೆ ಎಚ್ಚರ ವಹಿಸಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಾದ ಡಾ. ಮಂಜುನಾಥ್ ಡಿ.ಎನ್. ತಿಳಿಸಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಛೇರಿಯಲ್ಲಿಂದು ‘ಗರ್ಭಪೂರ್ವ ಮತ್ತು ಪ್ರಸವಪೂರ್ವ ಭ್ರೂಣಲಿಂಗ ಪತ್ತೆ ತಂತ್ರ ವಿಧಾನಗಳ ನಿಷೇಧ ಕಾಯ್ದೆ’ ಕುರಿತು ಜಿಲ್ಲಾ ಮಟ್ಟದ ಸಲಹಾ ಸಮಿತಿ ಸಭೆ ನಡೆಸಲಾಯಿತು.
ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ನವೀಕರಣಕ್ಕೆ ಬಂದಿರುವ ಸ್ಕ್ಯಾನಿಂಗ್ ಕೇಂದ್ರಗಳ ನೋಂದಣಿಗೆ ಕುರಿತಂತೆ ಸ್ಥಳ ಪರಿಶೀಲನೆ ಮಾಡಿ ಮುಂದಿನ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.
ಹೆಣ್ಣು ಭ್ರೂಣ ಹತ್ಯೆಯ ಬಗ್ಗೆ ಹೆಚ್ಚಿನ ಗಮನ ಹರಿಸುವುದರ ಜೊತೆಗೆ ಗರ್ಭಿಣಿಯರಿಗೆ ಸರ್ಕಾರಿ ಆಸ್ಪತ್ರೆಗಳಲ್ಲಿ ಈ ಕಾಯ್ದೆಯ ಬಗ್ಗೆ ಮಾಹಿತಿ ನೀಡಲಾಗುವುದು ಹಾಗೂ ಪಿಸಿ ಪಿ ಎನ್ ಡಿ ಟಿ ಕಾಯ್ದೆ ಯ ಬಗ್ಗೆ ಮುಂದಿನ ದಿನಗಳಲ್ಲಿ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗುವುದು ಎಂದು ತಿಳಿಸಿದರು.
ಮಗು ಜನನವಾದ ಕೂಡಲೇ ತಾಯಿ ಕಾರ್ಡ್ ಮಾಡಿಸುವುದು ಅಗತ್ಯವಾಗಿದ್ದು, ಇದರ ಬಗ್ಗೆ ಹೆಚ್ಚಿನ ಒತ್ತು ನೀಡಬೇಕು ಹಾಗೂ ನಕಲಿ ವೈದ್ಯರು ಕಂಡು ಬಂದಲ್ಲಿ ಅಂತಹವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಸಭೆಯಲ್ಲಿ ನೋಂದಾಣಿಗಾಗಿ ಬಂದಿರುವ ಸ್ಕ್ಯಾನಿಂಗ್ ಕೇಂದ್ರಗಳಿಗೆ ನೋಂದಣಿ, ನವೀಕರಣಕ್ಕೆ ಬಂದಿರುವ ಸ್ಕ್ಯಾನಿಂಗ್ ಕೇಂದ್ರಗಳಿಗೆ ನೋಂದಣಿ ಕೇಂದ್ರಗಳ ಬಗ್ಗೆ ಚರ್ಚಿಸಲಾಯಿತು. ಗರ್ಭ ಪೂರ್ವ ಮತ್ತು ಪ್ರಸವ ಪೂರ್ವ ಕಾರ್ಯಕ್ರಮದ ಬಗ್ಗೆ ಹೆಚ್ಚಿನ ನಿಗಾ ವಹಿಸುವ ಬಗ್ಗೆ ಚರ್ಚಿಸಿದರು.
ಸಭೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ರೇಖಾ ಮತ್ತು ಜಿಲ್ಲಾ ಮಟ್ಟದ ಆರೋಗ್ಯಾಧಿಕಾರಿಗಳು ಹಾಜರಿದ್ದರು.