ರಾಜ್ಯದ ಅನುದಾನಿತ ಶಿಕ್ಷಣ ಸಂಸ್ಥೆಗಳಲ್ಲಿ ಖಾಲಿ ಇರುವ ಶಿಕ್ಷಕ ಹುದ್ದೆಗೆ ಕೂಡಲೇ ನೇಮಕಾತಿ ಮಾಡಬೇಕೆಂದು ರೂಪ್ಸಾ ಕರ್ನಾಟಕ ರಾಜ್ಯಾಧ್ಯಕ್ಷ ಲೋಕೇಶ್ ತಾಳಿಕಟ್ಟೆ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಭೇಟಿ ಮಾಡಿ ಮನವಿ ಸಲ್ಲಿಸದರು.
ಅವರು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯನವರನ್ನು ಭೇಟಿ ಮಾಡಿ ಅನುದಾನಿತ ಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಯನ್ನು ಶೀಘ್ರವಾಗಿ ಭರ್ತಿ ಮಾಡಬೇಕೆಂದು ನ್ಯಾಯಾಲಯ ನೀಡಿರುವ ಆದೇಶದ ಪ್ರತಿಯನ್ನು ಹಸ್ತಾಂತರಿಸಿ ಕಳೆದ ಒಂಭತ್ತು ವರ್ಷಗಳಿಂದ ನಿರಂತರವಾಗಿ ವಿದ್ಯಾರ್ಥಿಗಳ ಸಂಖ್ಯೆಯ ನೆಪ ಹೇಳಿಕೊಂಡು ನೂರಾರು ಅನುದಾನಿತ ಶಾಲೆಗಳನ್ನು ಮುಚ್ಚುತ್ತಾ ಬಂದಿದ್ದು, ಅನುದಾನಿತ ಶಾಲೆಗಳು ಸ್ವಾತಂತ್ರ್ಯಪೂರ್ವದಿಂದಲೂ ಬಡ ಹಾಗೂ ಮಧ್ಯಮ ವರ್ಗದ ವಿದ್ಯಾರ್ಥಿಗಳಿಗೆ ಶಿಕ್ಷಣ ಕೇಂದ್ರಗಳಾಗಿ ಸಮಾಜಕ್ಕೆ ತಮ್ಮದೇ ಆದ ಕೊಡುಗೆ ನೀಡುತ್ತಾ ಬಂದಿವೆ. ಆದರೆ ಪ್ರಸ್ಥುತ ಸ್ಥಿತಿಯಲ್ಲಿ ಸರ್ಕಾರ ವಿದ್ಯಾರ್ಥಿಗಳ ಕನಿಷ್ಟ ಸಂಖ್ಯೆ ಆಧಾರದಲ್ಲಿ ಶಾಲೆಗಳನ್ನು ಮುಚ್ಚುವ ಕೆಲಸ ಮಾಡುತ್ತಿದ್ದು,ಈ ಕೆಲಸ ಸರ್ಕಾರ ಮಾಡಬಾರದು, ಈ ನಿಟ್ಟಿನಲ್ಲಿ ಅನುದಾನಿತ ಶಾಲೆಗಳಿಗೆ ಶಿಕ್ಷಕರನ್ನು ನೇಮಕ ಮಾಡಿ ಅಲ್ಲಿ ಗುಣಾತ್ಮಕ ಶಿಕ್ಷಣ ನೀಡಲು ಅನುಕೂಲ ಕಲ್ಪಿಸಬೇಕೆಂದು ಮನವಿ ಮಾಡಿದರು.
ಇದೇ ವೇಳೆ ಅವರು ಮುಖ್ಯಮಂತ್ರಿಗಳಿಗೆ ಮನವಿ ಮಾಡುತ್ತಾ, ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ಕನಿಷ್ಟ ಸಂಖ್ಯೆಯ ಯಾವುದೇ ಮಾನದಂಡವಿಲ್ಲ. ಎಷ್ಟೇ ವಿದ್ಯಾರ್ಥಿಗಳಿದ್ದರೂ ಶಾಲೆಯನ್ನು ನಡೆಸಲಾಗುತ್ತಿದೆ ಹಾಗೂ ಸರ್ಕಾರಿ ಶಾಲಾ ಶಿಕ್ಷಕರಿಗೆ ಭದ್ರತೆ ಒದಗಿಸಲಾಗುತ್ತಿದೆ. ಆದರೆ ಅನುದಾನಿತ ಶಾಲೆಗಳಲ್ಲಿ ಮಕ್ಕಳ ಸಂಖ್ಯೆಯನ್ನೇ ಮೂಲ ವಿಷಯವನ್ನಾಗಿಸಿಕೊಂಡು ತಾರತಮ್ಯವೆಸಗಲಾಗುತ್ತಿದೆ. ಅನುದಾನಿತ ಶಾಲೆಗಳಿಗೆ ಶಿಕ್ಷಕರನ್ನು ನೇಮಕಾತಿ ಮಾಡಿಕೊಳ್ಳಲು ಸರ್ಕಾರ ಅನುಮತಿ ನೀಡದ ಕಾರಣದಿಂದಾಗಿ ಇಂದು ಶಾಲೆಗಳು ವಿದ್ಯಾರ್ಥಿಗಳ ಸಂಖ್ಯೆಯ ಕೊರತೆಯನ್ನೆದುರಿಸುತ್ತಾ ಬಾಗಿಲು ಮುಚ್ಚುವ ಸ್ಥಿತಿಗೆ ಬಂದು ತಲುಪಿದೆ. ಈ ನಿಟ್ಟಿನಲ್ಲಿ ನ್ಯಾಯಾಲಯವೂ ಸಹ ಸರ್ಕಾರಕ್ಕೆ ಅನುದಾನಿತ ಶಾಲೆಗಳಿಗೆ ಶೀಘ್ರವೇ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಬೇಕೆಂಬ ಸೂಚನೆ ನೀಡಿದೆ. ಈ ಎಲ್ಲಾ ಅಂಶಗಳನ್ನು ಗಮನಿಸಿ ಕೂಡಲೇ ಅನುದಾನಿತ ಶಾಲೆಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅನುಮತಿ ನೀಡವೇಕೆಂದು ಮನವಿ ಮಾಡಿದರು.
ಈ ವೇಳೆ ಆದೇಶದ ಪ್ರತಿ ಹಾಗೂ ದಾಖಲೆಗಳನ್ನು ಪರಿಶೀಲಿಸಿದ ಮುಖ್ಯಮಂತ್ರಿಗಳು ಈ ವಿಷಯ ಕುರಿತು ಚರ್ಚಿಸಿ ತೀರ್ಮಾನ ಕೈಗೊಳ್ಳವುದಾಗಿ ಭರವಸೆ ನೀಡಿದರು. ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಅನುದಾನಿತ ಶಾಲಾ ಆಡಳಿತ ಮಂಡಳಿಯ ಸಮಿತಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು.