ತುಮಕೂರು: ಫೆ.5ರಂದು ಕೆಪಿಸಿಸಿ ಅಧ್ಯಕ್ಷರು ಹಾಗೂ ಉಪಮುಖ್ಯಮಂತ್ರಿಗಳಾದ ಡಿಕೆ ಶಿವಕುಮಾರ್ ರವರು ತುಮಕೂರು ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಕಚೇರಿಯನ್ನು ಉದ್ಘಾಟಿಸಲಿದ್ದಾರೆ ಎಂದು ನಗರದಲ್ಲಿ ಮಾಜಿ ಶಾಸಕ ಡಿ.ಸಿ.ಗೌರಿಶಂಕರ್ ತಿಳಿಸಿದರು.
ಅವರು ನಗರದ ಶೆಟ್ಟಿಹಳ್ಳಿ ರಿಂಗ್ ರಸ್ತೆಯ ಬಳಿ ನೂತನವಾಗಿ ನಿರ್ಮಾಣಗೊಂಡಿರುವ ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಕಚೇರಿಯ ಬಳಿ ಸುದ್ದಿಗಾರರೊಂದಿಗೆ ಮಾತನಾಡಿ ತುಮಕೂರು ಗ್ರಾಮಾಂತರ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷವನ್ನು ತಾವು ಸದೃಢವಾಗಿ ಸಂಘಟಿಸುತ್ತಿದ್ದು, ಇದರ ಹಿನ್ನೆಲೆಯಲ್ಲಿ ಗ್ರಾಮಾಂತರ ಕಾಂಗ್ರೆಸ್ ಕಚೇರಿಯನ್ನು ನೂತನವಾಗಿ ನಿರ್ಮಿಸಿದ್ದು, ಅದನ್ನು ಕರ್ನಾಟಕ ಸರ್ಕಾರದ ಉಪಮುಖ್ಯಮಂತ್ರಿಗಳು ಹಾಗೂ ಕೆಪಿಸಿಸಿ ಅಧ್ಯಕ್ಷರಾದ ಡಿಕೆ ಶಿವಕುಮಾರ್ ಉದ್ಘಾಟಿಸಲಿದ್ದಾರೆ. ಇದೇ ದಿನ ತುಮಕೂರು ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಭೈರಸಂದ್ರದಲ್ಲಿ ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಕಾರ್ಯಕರ್ತರ ಬೃಹತ್ ಸಮಾವೇಶವನ್ನು ಸಹ ಆಯೋಜಿಸಲಾಗಿದ್ದು ಕಾಂಗ್ರೆಸ್ ಪಕ್ಷದ ಗ್ಯಾರಂಟಿ ಯೋಜನೆಗಳು ಹಾಗೂ ಮುಂಬರುವ ಲೋಕಸಭಾ ಚುನಾವಣೆಗೆ ಪಕ್ಷವನ್ನು ಸದೃಢಗೊಳಿಸುವ ನಿಟ್ಟಿನಲ್ಲಿ ಡಿ.ಕೆ. ಶಿವಕುಮಾರ್ ಗೃಹ ಸಚಿವ ಡಾ. ಜಿ.ಪರಮೇಶ್ವರ್, ಸಹಕಾರ ಸಚಿವ ಕೆ.ಎನ್. ರಾಜಣ್ಣ ಸೇರಿದಂತೆ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರು ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಲಿದ್ದಾರೆ.
ತುಮಕೂರು ಗ್ರಾಮಾಂತರ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಶಕ್ತಿಯನ್ನು ಮುಂದಿನ ಲೋಕಸಭಾ ಚುನಾವಣೆಯಲ್ಲಿ ತಾವು ಹಾಗೂ ತಮ್ಮ ಬೆಂಬಲಿಗರು ತೋರಿಸಲಿದ್ದು, ಕ್ಷೇತ್ರದ ಇಡೀ ರಾಜಕೀಯ ವ್ಯವಸ್ಥೆ ಬದಲಾಗಲಿದೆ ಎಂದರು.
ನೂತನ ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಕಚೇರಿ ಉದ್ಘಾಟನೆಗೆ ಕಾರ್ಯಕರ್ತರು ಹರಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಅವರು ಇದೇ ವೇಳೆ ಮನವಿ ಮಾಡಿದರು. ಈ ಸಂದರ್ಭದಲ್ಲಿ ಗ್ರಾಮಾಂತರ ಕಾಂಗ್ರೆಸ್ ಮುಖಂಡರು ಉಪಸ್ಥಿತರಿದ್ದರು.