ತುಮಕೂರು: ಜನವಿರೋಧಿ, ರೈತ ವಿರೋಧಿ, ಅಭಿವೃದ್ಧಿ ನಿರ್ಲಕ್ಷ ಮಾಡಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹೋರಾಟವನ್ನು ತೀವ್ರಗೊಳಿಸಿದೆ. ಪೆಟ್ರೋಲ್, ಡೀಸೆಲ್ ಬೆಲೆ ಏರಿಸಿರುವುದನ್ನು ಖಂಡಿಸಿ ಇದೇ ಗುರುವಾರ(ಜೂ.20) ಜಿಲ್ಲೆ, ತಾಲ್ಲೂಕು ಕೇಂದ್ರಗಳಲ್ಲಿ ರಸ್ತೆ ತಡೆ ಮಾಡಿ ಸರ್ಕಾರಕ್ಕೆ ಬಿಸಿ ಮುಟ್ಟಿಸಲಾಗುವುದು ಎಂದು ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಂದೀಪ್‌ಗೌಡ ತಿಳಿಸಿದ್ದಾರೆ.
ಈ ಸಂಬಂಧ ಹೇಳಿಕೆ ನಿಡಿರುವ ಅವರು, ಕಾಂಗ್ರೆಸ್ ಸರ್ಕಾರ ಬಂದಾಗಿನಿಂದ ಯಾವುದೇ ಅಭಿವೃದ್ಧಿ ಕಾರ್ಯಗಳಾಗಿಲ್ಲ, ಬಿಜೆಪಿ ಸರ್ಕಾರ ಅನುಷ್ಠಾನಕ್ಕೆ ತಂದಿದ್ದ ಜನಪರ ಯೋಜನೆಗಳನ್ನೂ ಕಾಂಗ್ರೆಸ್ ಸರ್ಕಾರ ಸ್ಥಗಿತಗೊಳಿಸಿ ಜನರ ಆಕ್ರೋಶಕ್ಕೆ ಕಾರಣವಾಗಿದೆ. ಸರ್ಕಾರದ ಜನವಿರೋಧಿ ನೀತಿ, ರೈತ ವಿರೋಧಿ ನೀತಿಗಳನ್ನು ಬಿಜೆಪಿ ಖಂಡಿಸುತ್ತಾ ಹೋರಾಟ ಮಾಡಿಕೊಂಡುಬರುತ್ತಿದೆ. ಗುರುವಾರ ರಸೆ ತಡೆದು ಹೋರಾಟ ಮಾಡಲಾಗುವುದು, ಏರಿಸಿರುವ ಪೆಟ್ರೋಲ್, ಡೀಸೆಲ್ ಬೆಲೆ ವಾಪಸ್ ಪಡೆಯುವವರೆಗೂ ಹೋರಾಟ ನಿಲ್ಲಿಸುಸವುದಿಲ್ಲ ಎಂದು ಹೇಳಿದ್ದಾರೆ.
ಎಸ್.ಟಿ. ಸಮುದಾಯದ ಅಭಿವೃದ್ಧಿಗೆ ಬಳಕೆಯಾಗಬೇಕಾಗಿದ್ದ ವಾಲ್ಮೀಕಿ ಅಭಿವೃದ್ಧಿ ನಿಗಮದ 180 ಕೋಟಿ ರೂ. ನಾಪತ್ತೆಯಾಗಿದೆ. ಭ್ರಷ್ಟಾಚಾರದಲ್ಲಿ ಮುಳುಗಿರುವ ಕಾಂಗ್ರೆಸ್ ಸರ್ಕಾರದಿಂದ ಎಸ್‌ಇಪಿಟಿಎಸ್‌ಪಿ ಅನುದಾನ ದರ್ಬಳಕೆ ಮಾಡಲಾಗಿದೆ. ಹೈನುಗಾರರ 7 ತಿಂಗಳ ಹಾಲಿನ ಪ್ರೋತ್ಸಾಹಧನ ಬಿಡುಗಡೆ ಮಾಡಿಲ್ಲ. 3 ತಿಂಗಳಿನಿಂದ ಆಂಬುಲೆನ್ಸ್‌ಗಳ ವೇತನ ನೀಡಿಲ್ಲ, ವಿದ್ಯುತ್ ದರ ಹೆಚ್ಚಳ ಮಾಡಲಾಗಿದೆ, ಬಿತ್ತನೆ ಬೀಜದ ಬೆಲೆಯನ್ನು ಶೇಕಡ 30ರಷ್ಟು ಹೆಚ್ಚಿಸಲಾಗಿದೆ. ಈಗ ಪೆಟ್ರೋಲ್, ಡೀಸೆಲ್ ಬೆಲೆ ಏರಿಸಿ ಜನಸಾಮನ್ಯರನ್ನು ಮತ್ತಷ್ಟು ಸಂಕಷ್ಟಕ್ಕೆ ಸಿಲುಕಿಸಿದೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹಾಳಾಗಿದೆ. 4 ತಿಂಗಳಲ್ಲಿ 400ಕ್ಕೂ ಹೆಚ್ಚು ಕೊಲೆಗಳಾಗಿವೆ. 190ಕ್ಕೂ ಹೆಚ್ಚು ಅತ್ಯಾಚಾರ ಪ್ರಕರಣಗಳು ವರದಿಯಾಗಿವೆ ಎಂದು ಹೇಳಿದ್ದಾರೆ.
ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿ ವಿರುದ್ಧ ಬಿಜೆಪಿ ಹೋರಾಟ ತೀವ್ರಗೊಳಿಸಿದೆ, ತೈಲ ಬೆಲೆ ಏರಿಕೆ ವಿರುದ್ಧ ಗುರುವಾರ ನಗರ ಹಾಗೂ ಜಿಲ್ಲೆಯ ಎಲ್ಲಾ ತಾಲ್ಲೂಕು ಕೇಂದ್ರಗಳಲ್ಲಿ ರಸ್ತೆ ತಡೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಸಂದೀಪ್‌ಗೌಡ ತಿಳಿಸಿದ್ದಾರೆ.