ತುಮಕೂರು : ಅಕ್ಟೋಬರ್ 11ರಿಂದ 21ರವರೆಗೆ ನಡೆಯಲಿರುವ ತುಮಕೂರು ದಸರಾ-2026ರ ಅಂಗವಾಗಿ ಆಯೋಜಿಸಲಾಗಿರುವ ಧಾರ್ಮಿಕ ಕಾರ್ಯಕ್ರಮಗಳಿಗೆ ಜಿಲ್ಲಾಧಿಕಾರಿ ಶ್ರೀಮತಿ ಶುಭ ಕಲ್ಯಾಣ್ ಅವರು ಇಂದು ವಿಧಿವತ್ತಾಗಿ ಚಾಲನೆ ನೀಡಿದರು. ತುಮಕೂರು ನಗರದ ಸರ್ಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿ ದಸರಾ ಧಾರ್ಮಿಕ ಕಾರ್ಯಕ್ರಮಗಳಿಗಾಗಿ ಕೈಗೊಳ್ಳಲಾಗುತ್ತಿರುವ ಸಿದ್ಧತೆಗಳು ಹಾಗೂ ವೇದಿಕೆ ನಿರ್ಮಾಣ ಕಾಮಗಾರಿಗಳಿಗೆ ಜಿಲ್ಲಾಧಿಕಾರಿಗಳು ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಧಾರ್ಮಿಕ ಕಾರ್ಯಕ್ರಮಗಳ ಆಯೋಜನೆ, ವಿಧಿವಿಧಾನಗಳು ಹಾಗೂ ಅಗತ್ಯ ಸೌಲಭ್ಯಗಳ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಿ, ಕಾರ್ಯಕ್ರಮಗಳು ಸುಸೂತ್ರವಾಗಿ ನಡೆಯುವಂತೆ ಅಗತ್ಯ ಮುನ್ನೆಚ್ಚರಿಕೆ ಹಾಗೂ ವ್ಯವಸ್ಥೆಗಳನ್ನು ಕೈಗೊಳ್ಳುವಂತೆ ಸೂಚಿಸಿದರು. ದಸರಾ ಅಂಗವಾಗಿ ನಿರ್ಮಿಸಲಾಗುತ್ತಿರುವ ಧಾರ್ಮಿಕ ಮಂಟಪ, ಸಾಂಸ್ಕೃತಿಕ ದಸರಾ ವೇದಿಕೆ, ನೃತ್ಯ ವೇದಿಕೆ ಸೇರಿದಂತೆ ವಿವಿಧ ವೇದಿಕೆಗಳ ನಿರ್ಮಾಣ ಕಾರ್ಯಗಳ ಪ್ರಗತಿಯನ್ನು ಜಿಲ್ಲಾಧಿಕಾರಿಗಳು ಪರಿಶೀಲಿಸಿದರು. ಪ್ರೇಕ್ಷಕರಿಗೆ ಕಾರ್ಯಕ್ರಮಗಳನ್ನು ಸುಗಮವಾಗಿ ವೀಕ್ಷಿಸಲು ಅನುಕೂಲವಾಗುವಂತೆ ಆಸನ ವ್ಯವಸ್ಥೆ, ವಿದ್ಯುತ್ ಬೆಳಕು, ಧ್ವನಿವ್ಯವಸ್ಥೆ, ಸುರಕ್ಷತಾ ಕ್ರಮಗಳು ಹಾಗೂ ಪ್ರವೇಶ–ನಿರ್ಗಮನ ವ್ಯವಸ್ಥೆಗಳನ್ನು ಸಮರ್ಪಕವಾಗಿ ಕಲ್ಪಿಸುವ ಕುರಿತಂತೆ ಅಧಿಕಾರಿಗಳೊಂದಿಗೆ ಚರ್ಚಿಸಿದರು.

ದಸರಾ ಕಾರ್ಯಕ್ರಮಗಳ ವಿವಿಧ ವೇದಿಕೆಗಳಲ್ಲಿ ಧಾರ್ಮಿಕ, ಸಾಂಸ್ಕೃತಿಕ, ಕಲಾ ಹಾಗೂ ನೃತ್ಯ ಕಾರ್ಯಕ್ರಮಗಳು ಸಾರ್ವಜನಿಕರು ಹಾಗೂ ವಿವಿಧ ಕಲಾ ತಂಡಗಳಿಗೆ ಅಗತ್ಯವಾದ ಮೂಲಸೌಕರ್ಯ ಕಲ್ಪಿಸುವ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಲಾಯಿತು. ಕಾರ್ಯಕ್ರಮಗಳ ವೇಳಾಪಟ್ಟಿಗೆ ಅನುಗುಣವಾಗಿ ವೇದಿಕೆಗಳು ಹಾಗೂ ಸಂಬಂಧಿತ ಸೌಲಭ್ಯಗಳ ಕಾಮಗಾರಿಗಳನ್ನು ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸುವಂತೆ ಸೂಚಿಸಲಾಯಿತು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶ್ರೀಮತಿ ಅಶ್ವಿಜ ಬಿ.ವಿ., ಪೊಲೀಸ್ ವರಿಷ್ಠಾಧಿಕಾರಿ ಶ್ರೀ ಕೆ.ವಿ. ಅಶೋಕ್, ಅಪರ ಜಿಲ್ಲಾಧಿಕಾರಿ ಡಾ. ಎನ್. ತಿಪ್ಪೇಸ್ವಾಮಿ, ಮಹಾನಗರ ಪಾಲಿಕೆ ಆಯುಕ್ತರಾದ ಶ್ರೀಮತಿ ಶುಭ, ತುಮಕೂರು ಉಪ ವಿಭಾಗಾಧಿಕಾರಿ ಶ್ರೀಮತಿ ನಹೀದ ಜಮ್ ಜಮ್ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ದಸರಾ ಸಮಿತಿಗಳ ಪದಾಧಿಕಾರಿಗಳು ಮತ್ತು ಅಧಿಕಾರಿಗಳು ಉಪಸ್ಥಿತರಿದ್ದರು.
