ರಾಜ್ಯ ಹೆದ್ದಾರಿ ರಸ್ತೆ ಬದಿಯಲ್ಲಿ ಕಸದ ರಾಶಿ: ಗ್ರಾಮ ಪಂಚಾಯಿತಿ ಆಡಳಿತದ ವಿರುದ್ಧ ಸಾರ್ವಜನಿಕರ ಆಕ್ರೋಶ

ಗುಬ್ಬಿ ತಾಲೂಕಿನ ಕಡಬ ಹೋಬಳಿಯ ಕೆ.ಜಿ. ಟೆಂಪಲ್ ಗ್ರಾಮ ಮೂಲಕ ಹಾದು ಹೋಗಿರುವ ರಾಜ್ಯ ಹೆದ್ದಾರಿ ರಸ್ತೆ ಬದಿಗಳು ಕಸದ ರಾಶಿಯಿಂದ ತುಂಬಿ ಹೋಗಿರುವುದು ಸಾರ್ವಜನಿಕರ ಅಸಮಾಧಾನಕ್ಕೆ ಕಾರಣವಾಗಿದೆ.

 

 

ಅಭಿವೃದ್ಧಿಯತ್ತ ದಿನದಿಂದ ದಿನಕ್ಕೆ ಸಾಗುತ್ತಿರುವ ಕೆ.ಜಿ. ಟೆಂಪಲ್ ಗ್ರಾಮವು ವ್ಯಾಪಾರ ವಹಿವಾಟಿನ ಪ್ರಮುಖ ಕೇಂದ್ರವಾಗಿದ್ದು, ಸುತ್ತಮುತ್ತಲಿನ ಹತ್ತಾರು ಗ್ರಾಮಗಳಿಂದ ನಿತ್ಯ ನೂರಾರು ಜನರು ಇಲ್ಲಿಗೆ ಆಗಮಿಸುತ್ತಾರೆ. ಆದರೆ ರಸ್ತೆ ಬದಿಯಲ್ಲಿ ಎಲ್ಲೆಂದರಲ್ಲಿ ಬಿದ್ದಿರುವ ಕಸದ ರಾಶಿಗಳು ಗ್ರಾಮಕ್ಕೆ ಬರುವವರಿಗೆ ಅಸ್ವಚ್ಛತೆಯ ಚಿತ್ರಣವನ್ನು ನೀಡುತ್ತಿವೆ. ಕಸದ ದುರ್ವಾಸನೆಯಿಂದ ಸಾರ್ವಜನಿಕರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

 

 

 

ಎಸ್. ಕೊಡಗಿಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಬರುವ ಈ ಗ್ರಾಮದಲ್ಲಿ ಒಣ ಹಾಗೂ ಹಸಿ ಕಸವನ್ನು ಪ್ರತ್ಯೇಕವಾಗಿ ಸಂಗ್ರಹಿಸುವ ಯೋಜನೆ ಇದ್ದರೂ, ಸಮರ್ಪಕ ನಿರ್ವಹಣೆಯ ಕೊರತೆಯಿಂದ ಗ್ರಾಮದಲ್ಲಿ ಸ್ವಚ್ಛತೆ ಕಾಣೆಯಾಗಿರುವಂತಾಗಿದೆ. ಗ್ರಾಮ ಪಂಚಾಯಿತಿ ಆಡಳಿತವು ಕಸದ ನಿರ್ವಹಣೆಯಲ್ಲಿ ವಿಫಲವಾಗಿದೆ ಎಂಬ ಆರೋಪಗಳು ಕೇಳಿಬರುತ್ತಿವೆ.

 

 

 

ರಸ್ತೆ ಬದಿಯ ಅಂಗಡಿಗಳು, ಹೋಟೆಲ್‌ಗಳು ಹಾಗೂ ಕೋಳಿ ಅಂಗಡಿಗಳಿಂದ ಪ್ರತಿದಿನ ಉತ್ಪತ್ತಿಯಾಗುವ ಕಸವನ್ನು ಸರಿಯಾಗಿ ವಿಲೇವಾರಿ ಮಾಡದ ಪರಿಣಾಮ ಸಾರ್ವಜನಿಕರು ಮೂಗು ಮುಚ್ಚಿಕೊಂಡೇ ಓಡಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಅಲ್ಲದೆ, ಈ ಪ್ರದೇಶವು ಸಾಂಕ್ರಾಮಿಕ ರೋಗಗಳ ತಾಣವಾಗುವ ಭೀತಿ ಎದುರಾಗಿದೆ ಎಂದು ಗ್ರಾಮಸ್ಥರು ಆತಂಕ ವ್ಯಕ್ತಪಡಿಸಿದ್ದಾರೆ.

 

 

 

 

ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಕ್ರಮ ಕೈಗೊಂಡು ರಸ್ತೆ ಬದಿಯ ಕಸವನ್ನು ತೆರವುಗೊಳಿಸಿ, ಗ್ರಾಮದಲ್ಲಿ ಸ್ವಚ್ಛತಾ ವ್ಯವಸ್ಥೆಯನ್ನು ಸಮರ್ಪಕವಾಗಿ ಜಾರಿಗೊಳಿಸಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

Leave a Reply

Your email address will not be published. Required fields are marked *