ತುಮಕೂರು: ರಾಜ್ಯದ ಮಾಜಿ ಮುಖ್ಯಮಂತ್ರಿ ಡಿ. ದೇವರಾಜು ಅರಸು ಅವರ 109ನೇ ಜನ್ಮ ದಿನಾಚರಣೆಯನ್ನು ಆಗಸ್ಟ್ 20ರಂದು ಅರ್ಥಪೂರ್ಣವಾಗಿ ಆಚರಿಸಲು ಸಕಲ ಸಿದ್ಧತೆಯನ್ನು ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜರುಗಿದ ಪೂರ್ವಭಾವಿ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ಅರಸು ಅವರ ಜನ್ಮ ದಿನಾಚರಣೆಯನ್ನು ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದಲ್ಲಿಯೂ ಆಚರಿಸಬೇಕು. ಜಿಲ್ಲಾ ಮಟ್ಟದ ಕಾರ್ಯಕ್ರಮವನ್ನು ನಗರದ ಕೇಂದ್ರ ಗ್ರಂಥಾಲಯ ಆಡಿಟೋರಿಯಂನಲ್ಲಿ ಹಮ್ಮಿಕೊಳ್ಳಲು ನಿರ್ದೇಶಿಸಿದರಲ್ಲದೆ, ಹಿಂದುಳಿದ ವರ್ಗಗಳ ಮೆಟ್ರಿಕ್ ಪೂರ್ವ/ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳು, ಆಶ್ರಮ ಶಾಲೆಗಳಲ್ಲಿ ಕಡ್ಡಾಯವಾಗಿ ಅರಸು ಅವರ ಜನ್ಮ ದಿನಾಚರಣೆಯನ್ನು ಆಚರಿಸಬೇಕೆಂದು ಸೂಚನೆ ನೀಡಿದರು.
ಜನ್ಮ ದಿನಾಚರಣೆ ನಿಮಿತ್ತ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ೫ ಮಂದಿ ಸಾಧಕರನ್ನು ಗೌರವಿಸಿ ಸನ್ಮಾನಿಸಬೇಕು. ದಿನಾಚರಣೆಯಂದು ಡಿ. ದೇವರಾಜು ಅರಸು ಜೀವಮಾನ ಸಾಧನೆ ಕುರಿತು ಮಕ್ಕಳಿಂದ ನಾಟಕ ಪ್ರದರ್ಶನ ಏರ್ಪಡಿಸಬೇಕು ಎಂದು ಸೂಚಿಸಿದರು. ವೇದಿಕೆ ಕಾರ್ಯಕ್ರಮಕ್ಕೂ ಮುನ್ನ ಜಿಲ್ಲಾಧಿಕಾರಿಗಳ ಕಚೇರಿಯಿಂದ ಕೇಂದ್ರ ಗ್ರಂಥಾಲಯದವರೆಗೂ ಮೆರವಣಿಗೆ ಹಮ್ಮಿಕೊಳ್ಳಬೇಕೆಂದು ವಿವಿಧ ಸಂಘ ಸಂಸ್ಥೆಗಳು ಮನವಿ ಮಾಡಿದ ಮೇರೆಗೆ ಜಿಲ್ಲಾಧಿಕಾರಿಗಳು ಸಮ್ಮತಿ ಸೂಚಿಸಿದರು.
ಹಿಂದುಳಿದ ವರ್ಗಗಳ ಸಮುದಾಯದ ಸಂಘ ಸಂಸ್ಥೆಗಳ ಪದಾಧಿಕಾರಿಗಳು ನೂತನವಾಗಿ ನಿರ್ಮಾಣಗೊಂಡಿರುವ ನಗರದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣಕ್ಕೆ ಡಿ.ದೇವರಾಜು ಅರಸು ಅವರ ಹೆಸರನ್ನು ಇಟ್ಟಿರುವುದು ಅಭಿನಂದನಾರ್ಹ. ಎಲ್ಲರಿಗೂ ಕಾಣುವ ಹಾಗೆ ನಿಲ್ದಾಣದ ಹೆಸರಿಗೆ ಎಲ್‌ಇಡಿ ಲೈಟಿಂಗ್ ವ್ಯವಸ್ಥೆ ಮಾಡಬೇಕು. ಮೈಸೂರು ಜಿಲ್ಲೆ ಹುಣಸೂರಿನಲ್ಲಿರುವ ದೇವರಾಜ ಅರಸು ಅವರ ಮನೆ ಮಳೆಯಿಂದ ಸೋರುತ್ತಿದ್ದು, ದುರಸ್ತಿಗೆ ಸರ್ಕಾರಕ್ಕೆ ಶಿಫಾರಸ್ಸು ಮಾಡಬೇಕು. ಪ್ರಸ್ತುತ ನಗರದ ಹೊರವಲಯದ ಮೈದಾಳದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಹಿಂದುಳಿದ ವರ್ಗಗಳ ಇಲಾಖಾ ಕಚೇರಿಗೆ ಸಾರ್ವಜನಿಕರು ಹೋಗಿ ಬರಲು ಕಷ್ಟಕರವಾಗಿದ್ದು, ನಗರಕ್ಕೆ ಹತ್ತಿರವಾಗುವಂತೆ ಕಚೇರಿಯನ್ನು ಸ್ಥಳಾಂತರಿಸಬೇಕು ಎಂದು ಮನವಿ ಮಾಡಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಡಾ: ಎನ್. ತಿಪ್ಪೇಸ್ವಾಮಿ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಅಬ್ದುಲ್ ಖಾದರ್, ಹಿಂದುಳಿದ ವರ್ಗಗಳ ಕಲ್ಯಾಣ ಅಧಿಕಾರಿ ಸೋನಿಯಾ ವರ್ಣೇಕರ್, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಕೃಷ್ಣಪ್ಪ, ಡಿಡಿಪಿಐ ಕೆ.ಮಂಜುನಾಥ್, ಕ್ಷೇತ್ರ ಶಿಕ್ಷಣಾಧಿಕಾರಿ ಹನುಮಂತಪ್ಪ, ಸಮುದಾಯದ ವಿವಿಧ ಮುಖಂಡರು, ಮತ್ತಿತರರು ಉಪಸ್ಥಿತರಿದ್ದರು.